ಶ್ರೀ ಕನಕದಾಸರು (1509-1609) ಕರ್ನಾಟಕದಲ್ಲಿ 15-16ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ0ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕ ರಾಗಿದ್ದು ಯುದ್ದವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತ ರಾದರಂತೆ.
ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜಾತಿಗೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪ ಎಂಬ ದಂಪತಿಗಳ ಮಗನಾಗಿ ಜನಿಸಿದರು.
ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರ ವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕ ದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ.
ಅನೇಕರ ನಂಬಿಕೆಯಂತೆ ಉಡುಪಿಯ ದೇವಸ್ಥಾನದಲ್ಲಿ ಅವರಿಗೆ ಪ್ರವೇಶ ದೊರೆಯದೆ ಹೋದಾಗ ದೇವಸ್ಥಾನದ ಹಿಂದೆ ನಿಂತು ಹಾಡತೊಡಗಿದರಂತೆ ("ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ"). ಆಗ ಹಿಂಭಾಗದ ಗೋಡೆ ಒಡೆದು ಕೃಷ್ಣನ ವಿಗ್ರಹ ಹಿಮ್ಮುಖವಾಗಿ ತಿರುಗಿತಂತೆ. (ಈಗಲೂ ಉಡುಪಿ ಕೃಷ್ಣನ ದೇವಸ್ಥಾನದ ಹಿಂದುಗಡೆಯ ಗೋಡೆ ಯಲ್ಲಿರುವ ಬಿರುಕಿನಲ್ಲಿ ಶ್ರೀಕೃಷ್ಣನ ಕಾಣಬಹುದು. ಇಲ್ಲಿ ಒಂದು ಕಿಟಕಿಯನ್ನು ನಿರ್ಮಿಸಿ ಅದನ್ನು 'ಕನಕನ ಕಿಂಡಿ' ಎಂದು ಕರೆಯಲಾಗಿದೆ).
ವಾದಿರಾಜರು, ಪುರಂದರದಾಸರು, ಕನಕದಾಸರು ತ್ರಿವೇಣೀ ಸಂಗಮದಂತೆ. ಅವರು ಮೂರು ಮಂದಿಯೂ ಒಂದೇ ಓರಗೆ ಯವರು, ಒಂದೇ ಮನಸ್ಸಿನವರು, ಸಮಕಾಲೀನರು, ಪರಸ್ಪರ ಗೌರವಾದರಗಳನ್ನು ಹೊಂದಿದ್ದವರು. ಪ್ರತಿಯೊಬ್ಬರಿಗೂ ಇನ್ನಿಬ್ಬರ ಪ್ರೌಢಿಮೆ ಔನ್ನತ್ಯಗಳ ಅರಿವಿ ತ್ತು. 120 ವರ್ಷಗಳ ಕಾಲ ಬದುಕಿದ್ದ ವಾದಿರಾಜ (1480-1600)ರಿಗೆ ತಮ್ಮ ಮಠದಲ್ಲಿ ಸರ್ವಾಂಗೀಣ ಸುಧಾರಣೆ ತರುವ ತವಕ ಇತ್ತಾದರೂ ಅಲ್ಲಿ ಭದ್ರವಾಗಿ ಬೇರೂರಿದ್ದ ಮಡಿವಂತಿಕೆಯನ್ನು ಹೋಗಲಾಡಿಸಲು ಅವರಿಂದಾಗಿರಲಿಲ್ಲ. ವಾದಿರಾಜರೊಂದಿಗೆ ತಮಗಿದ್ದ ಸ್ನೇಹವನ್ನು ದುರುಪಯೋಗ ಪಡಿಸಿಕೊಂಡು ಮಠದಲ್ಲಿ ಪ್ರವೇಶ ಪಡೆಯುವ ಧಾಷ್ಟ್ರ್ಯವೂ ಕನಕರಿಗಿರಲಿಲ್ಲ.
ಹೀಗೆ ಕನಕದಾಸರ ಸಾಹಿತ್ಯಕೃತಿಗಳು, ಅವರ ಬಗೆಗಿನ ಐತಿಹ್ಯಗಳು, ಅವರ ಕುರಿತು ಇತರೇ ಸಾಹಿತ್ಯಗಳಲ್ಲಿ ಅಥವಾ ಶಾಸನಗಳಲ್ಲಿನ ಮಾಹಿತಿಗಳನ್ನು ಕ್ರೋಢೀಕರಿಸಿ ಕನಕದಾಸರ ಸ್ಥೂಲ ಜೀವನ ಚಿತ್ರಣವನ್ನು ರಚಿಸಬಹು ದಲ್ಲದೆ ಪರಿಪೂರ್ಣ ಜೀವನಚರಿತ್ರೆಯ ನಿರೂಪಣೆ ಸಾಧ್ಯವಿಲ್ಲದ ಮಾತು. ಆದರೆ ವಿದ್ವತ್ ನೆಲೆಯಲ್ಲಿ ವಿದ್ವತ್ಸಂಪನ್ನ ಕನಕದಾಸರು ಕುಲಾತೀತರಾಗಿ ಕಾಲಾತೀತರಾಗಿ ಕನ್ನಡ ಸಾರಸ್ವತ ಲೋಕದಲ್ಲಿ ಅದ್ವೀತಿಯ ಸ್ಥಾನಗಳಿಸಿ, ಚಿರಸ್ಮರಣೀಯರಾಗಿದ್ದಾರೆ.
ಸಾಹಿತ್ಯ ರಚನೆ : ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿ ಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ ಕಾವ್ಯಕೃತಿಗಳು ಇಂತಿವೆ: ಮೋಹನತರಂಗಿಣಿ, ನಳಚರಿತ್ರೆ, ರಾಮಧಾನ್ಯ ಚರಿತೆ, ಹರಿಭಕ್ತಿಸಾರ, ನೃಸಿಂಹಸ್ತವ (ಉಪಲಬ್ದ ವಿಲ್ಲ)
ಕೀರ್ತನೆಗಳು : ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಕನಕದಾಸರ ಭಕ್ತಿ ಪಾರಮ್ಯವನ್ನು ಅವರ ಕೀರ್ತನೆ ಗಳಲ್ಲಿ ಕಾಣಬಹುದು. ಶ್ರೀಹರಿಯನ್ನು ತಮ್ಮ ಧಣಿಯಾಗಿ, ಇನಿಯನಾಗಿ, ಅಣೋರಣೀಯ ನಾಗಿ, ಮಹತೋಮಹೀಮ ನಾಗಿ ಅವರು ಕಂಡಿದ್ದಾರೆ. 'ಬಾ ರಂಗ ಎನ್ನ ಮನಕೆ ಎಂದು ಹೃದಯ ಸದನಕ್ಕೆ 'ಎಂದು ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ಒಳಗಣ್ಣಿನಿಂದ ಅವನ ಕಂಡು- 'ಕಂಡೆ ನಾ ತಂಡ ತಂಡ ಹಿಂಡು ದೈವ ಪ್ರಚಂಡ ರಿಪು ಗಂಡ ಉದ್ಧಂಡ ನರಸಿಂಹನ' ಎಂದು ಸಂತೋಷ ಪಟ್ಟಿದ್ದಾರೆ. 'ಎಲ್ಲಿ ನೋಡಿದರಲ್ಲಿ ರಾಮ' ಎಂಬ ಅನುಭೂತಿಯಲ್ಲಿ ಹರಿಯನ್ನು ಕಂಡ ಬಳಿಕ 'ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು' ಎಂಬ ಧನ್ಯತಾಭಾವ. 'ದಾಸದಾಸರ ಮನೆಯ ದಾಸಿಯರ ಮಗ ಮಂಕುದಾಸ ಮರುಳುದಾಸ ನರಜನ್ಮಹುಳು ಪರಮಪಾಪಿ' ಎಂದು ಕರೆದುಕೊಂಡಿದ್ದ ಅವರು ಜೀವ ಮಾಗಿ ಹಣ್ಣಾದಂತೆ ಪರಮಾತ್ಮನ ಸಾಕ್ಷಾತ್ಕಾರವಾದಂತೆ 'ಆತನೊಲಿದ ಮೇಲೆ ಇನ್ಯಾತರ ಕುಲವಯ್ಯಾ' ಎಂದುಕೊಳ್ಳುತ್ತಾರೆ.
ಜೈನ, ವೀರಶೈವರ ಕಿತ್ತಾಟ, ಮುಸಲ್ಮಾನ ಪ್ರಾಬಲ್ಯ ಇವುಗಳಿಂದ ಸೊರಗಿ ಹೋಗಿದ್ದ ವೈದಿಕ ಧರ್ಮಕ್ಕೆ ಪುನಶ್ಚೇತನ ನೀಡಲು ವ್ಯಾಸರಾಯ ರಂಥವರು ಶ್ರಮಿಸುತ್ತಿದ್ದ ಕಾಲವದು. ವೈದಿಕ ಸಂಸ್ಕೃತಿಯ ಉತ್ಥಾನ ಕ್ಕೆಂದು ಹುಟ್ಟು ಹಾಕಲಾದ ವಿಜಯನಗರ ಸಾಮ್ರಾಜ್ಯ ಕೃಷ್ಣದೇವರಾಯನ ಅಳಿವಿನ ನಂತರ ಪತನದ ಹಾದಿ ಹಿಡಿದಿತ್ತು. ಇಂಥಲ್ಲಿ ಕನಕದಾಸರಂಥವರ ಕಾವ್ಯಕೃಷಿ ಹಾಗೂ ಸಾರ್ವಜನಿಕ ಜೀವನ ವ್ಯಾಸರಾಯರಿಗೆ ಬೆಂಬಲದ ಶ್ರೀರಕ್ಷೆಯಾಗಿದ್ದವು.
ವ್ಯಾಸರಾಯರ ಸಂಪರ್ಕದ ನಂತರ 'ಕುಲಕುಲ ಕುಲ ವೆಂದು ಹೊಡೆ ದಾಡದಿರಿ' ಎಂದು ಜಂಕಿಸಿ ಕೇಳುವ ಹಾಗಾದರು.
ಇಂಥ ನಡವಳಿಕೆಗಳಿಂದ ವೈದಿಕ ಧರ್ಮದ ಗುತ್ತಿಗೆ ತಮ್ಮದು ಎಂದು ಭಾವಿಸಿದ್ದ ಬ್ರಾಹ್ಮಣರಿಗೆ ಕನಕದಾಸರು ಬಿಸಿ ತುಪ್ಪವಾದರು. ಹಿಂದೂ ಸಮಾಜದಲ್ಲಿ ಈ ಬ್ರಾಹ್ಮಣ ಬ್ರಾಹ್ಮಣೇತರ ಕಂದರ/ಕ ದೊಡ್ಡದಾಗುತ್ತಾ ಹೋದಂತೆ ವ್ಯಾಸಪೀಠದ ಜೊತೆಗೆ ದಾಸಕೂಟದ ರಚನೆಯೂ ಆಗಬೇಕಾದಂತಹ ಅನಿವಾರ್ಯತೆ ಮೂಡಿತು. ಉಚ್ಚಕುಲದ ಮಾಧ್ವ ಬ್ರಾಹ್ಮಣರು ಶಾಸ್ತ್ರಾಧ್ಯಯನ-ತರ್ಕ-ವ್ಯಾಕರಣಾದಿ ವಿಶಿಷ್ಟ ಜ್ಞಾನಸಂಪನ್ನರಾಗಿ ಶಬ್ದ ಶಬ್ದಗಳನ್ನು ತಿಕ್ಕಿ ತೀಡಿ ನಿಷ್ಪತ್ತಿ ಹಿಡಿದು ಸಿದ್ಧಾಂತ ಪ್ರಮೇಯಗಳನ್ನು ಮಂಡಿಸುವುದೇ ಮುಂತಾದ ಪ್ರಕ್ರಿಯೆಗಳನ್ನು ವ್ಯಾಸಪೀಠದಲ್ಲಿ ನಡೆಯಿಸುತ್ತಿದ್ದರು. ಪುರಂದರದಾಸ, ಕನಕದಾಸ, ಜಗನ್ನಾಥದಾಸ ಮೊದಲಾದವರ ಪ್ರಾತಿನಿಧಿಕ ಸಂಘಟನೆಯೇ ದಾಸಕೂಟ. ಇವರೂ ಮಾಧ್ವ ಮತ ಪ್ರಮೇಯಗಳನ್ನೇ ಪಸರಿಸುತ್ತಾ ಆಚರಿಸುತ್ತಿದ್ದರಾದರೂ ಅವುಗಳನ್ನು ಅರಿಯಲು ಸಂಸ್ಕೃತ ಜ್ಞಾನದ ಅನಿವಾರ್ಯತೆಯನ್ನು ನಿರಾಕರಿಸಿ, ಜಾತಿ ಮತಗಳ ಕಟ್ಟು ಪಾಡಿಲ್ಲದ ಇವರು ಶಾಸ್ತ್ರಾಧ್ಯಯನದ ಅನಿವಾರ್ಯತೆ ಇಲ್ಲದೆ ತಮ್ಮ ಅನುಭಾವದಿಂದ ಹೊರಹೊಮ್ಮುವ ಭಕ್ತಿಭಾವನೆಗಳನ್ನು ತಮ್ಮ ತಾಯ್ನುಡಿಯಲ್ಲಿ ಹಾಡಿ ಲೋಕಪಾವನವನ್ನೂ ಆತ್ಮೋದ್ಧಾರ ವನ್ನೂ ಮಾಡ ಬೇಕೆನ್ನುವವರು. ಇಂಥಾ ದಾಸಕೂಟವನ್ನು ಹುಟ್ಟುಹಾಕಿ ಪೋಷಿಸಿ ಬೆಳೆಸಿದವರು ವ್ಯಾಸರಾಯರು ಹಾಗೂ ವಾದಿರಾಜರು. ಇಷ್ಟಿದ್ದರೂ ದಾಸಕೂಟ ವ್ಯಾಸಪೀಠಗಳ ನಡುವೆ ಆಗಿಂದಾಗ್ಗೆ ಘರ್ಷಣೆಗಳು ನಡೆದೇ ಇದ್ದವು. ಈ ಕುರಿತು ಕನಕ ಪುರಂದರರ ಕೀರ್ತನೆಗಳೇ ನಮಗೆ ಸೂಚ್ಯವಾಗಿ ಹೇಳುತ್ತವೆ.
ಕುಲಕುಲವೆನ್ನುತಿಹರು ಕುಲವಾವುದು ಸತ್ಯ ಸುಖವುಳ್ಳ ಜನರಿಗೆ
ತೀರ್ಥವನು ಪಿಡಿದವರು ತಿರುನಾಮಧಾರಿಗಳೇ
ಜನ್ಮ ಸಾರ್ಥಕವಿರದವರು ಭಾಗವತರಹುದೇ
ಆವ ಕುಲವಾದರೇನು ಆವನಾದರೇನು ಆತ್ಮಭಾವವರಿತ ಮೇಲೆ
ಅವರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಖಚಿತ. ಹಾಗೆಯೇ ಅಮೂರ್ತವಾದ ಪ್ರತಿಮಾ ನಿರೂಪಣೆಯಲ್ಲಿ ಪರಿಣತಿ, ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವನ್ನು ಅವರ ಸಾಹಿತ್ಯದಲ್ಲಿ ಕಾಣಬಹುದು.
https://youtu.be/6MRcleKXBYw




0 Comments