ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಹಿರಿಯ ಸಚಿವ ಕೆ.ಎಸ್. ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುದಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶಿಸಿ ಮುಖ್ಯಮಂತ್ರಿಯನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ಧರಾಗಿ ಉಳಿಯಬೇಕು.
ಈಶ್ವರಪ್ಪ ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂಬುದನ್ನು ಸಾರಿದ್ದಾರೆ.ಇದಕ್ಕಾಗಿ ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.
ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣಾಭಿವೃದ್ಧಿಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ. ಇದು ಬಿಜೆಪಿ ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ವರಿಷ್ಠರು ಈಶ್ವರಪ್ಪ ಅವರ ಬಾಯಿಮುಚ್ಚಿಸಲು ಪ್ರಯತ್ನಿಸಿದರೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಈಶ್ವರಪ್ಪ ಅವರ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, ಈ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದಸೋಂಕು ಕಾರಣ ಎನ್ನುವುದನ್ನು ಈಶ್ವರಪ್ಪನವರ ತನ್ನ ಸಂಶೋಧನೆ ಮೂಲಕ ಬಹಿರಂಗ ಗೊಳಿಸಿದ್ದಾರೆ.
ನನ್ನ ಸರ್ಕಾರವನ್ನು ಶೇಕಡ 10 ರಕಮೀಷನ್ ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಮಂತ್ರಿಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ ನೀವೇ ರಾಜ್ಯಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ-ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, "ನಾ ಖಾವುಂಗಾ, ನಾ ಖಾನೆ ದೂಂಗಾ" ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು "ಮೈ ಬಿ ಖಾವೂಂಗಾ, ತುಮ್ ಬಿ ಖಾವೋ" ಎಂದು ಬದಲಿಸಿ ಬಿಡಿ-ಎಂದು ಲೇವಡಿ ಮಾಡಿದರು.
0 Comments