ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಪುನರ್ ನವೀಕರಣ ಮಾಡುತ್ತಿರುವ ಕೆ.ಆರ್.ಮಾರ್ಕೆಟ್ ಪ್ರದೇಶಕ್ಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಮತ್ತಿತರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಾಹಿತಿ ನೀಡಿದರು.
ಒಂದು ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ 41 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ 6 ರೆಫರಲ್ ಆಸ್ಪತ್ರೆಗಳು ಮಾತ್ರ ಇವೆ. ಬಹುತೇಕ ಆಸ್ಪತ್ರೆಗಳಲ್ಲಿ ಪ್ರಸೂತಿ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಸರ್ಕಾರದಿಂದ ಅನುದಾನ ಪಡೆದುಕೊಂಡು ಎಲ್ಲಾ ಆಸ್ಪತ್ರೆಗಳನ್ನು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳನ್ನಾಗಿ ಪರಿವರ್ತಿಸುವುದರ ಜತೆಗೆ ಆಸ್ಪತ್ರೆ ಇಲ್ಲದ ಕಡೆ ಹೊಸದಾಗಿ ಆಸ್ಪತ್ರೆ ನಿರ್ಮಾಣ ಮಾಡುವ ಅವಶ್ಯಕತೆ ಇದೆ.
ನಗರದ ವೈದ್ಯಕೀಯ ಸೇವೆ ಹೆಚ್ಚಳ ಮಾಡುವ ಉದ್ದೇಶದಿಂದ 1 ಸಾವಿರ ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇವೆ. ಒಪ್ಪಿಗೆ ಸಿಕ್ಕರೆ ಎಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಅವರು ಹೇಳಿದರು.
ನವೀಕೃತ ಕೆ.ಆರ್.ಮಾರ್ಕೆಟ್‌ಯಲ್ಲಿ ಬೀದಿ ಬದಿ ವ್ಯಾಪಾರಿಗಳು ವ್ಯವಸ್ಥಿತವಾಗಿ ವ್ಯಾಪಾರ ಮಾಡಲು ಸಮ್ಮತಿಸಿದರೆ ಮಾತ್ರ ವ್ಯಾಪಾರಕ್ಕೆ ಅನುಮತಿ ನೀಡಲಾಗುವುದು. ಎಲ್ಲೆಂದರಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳು, ಕೆಲವು ತಾಂತ್ರಿಕ ಕಾರಣಗಳಿಂದ ನಿಧಾನಗತಿಯಲ್ಲಿ ಸಾಗುತ್ತಿವೆ. ಈ ಕಾಮಗಾರಿಗಳಿಗೆ ವೇಗ ನೀಡಲು ತೀರ್ಮಾನಿಸಲಾಗುವುದು. ಅವಿನ್ಯೂ ರಸ್ತೆ ಹಾಗೂ ಕೆ.ಆರ್.ಮಾರ್ಕೆಟ್ ಪುನರ್ ನವೀಕರಣ ಕಾರ್ಯಗಳನ್ನು ಶೀಘ್ರದಲ್ಲಿಯೇ ಮುಕ್ತಾಯಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

0 Comments