ಅಕ್ಟೋಬರ್ 04, ಬೆಂಗಳೂರು: ಯೋಗಿ ಆದಿತ್ಯನಾಥ್ ನೇತೃತ್ವದ ಗೂಂಡಾ ರಾಜ್ಯದಲ್ಲಿ ರೈತರ, ದಲಿತರ, ಮಹಿಳೆಯರ, ಅಲ್ಪಸಂಖ್ಯಾತರ ಮತ್ತು ಬಡವರ ಮಾನ-ಪ್ರಾಣ ಯಾವುದೂ ಸುರಕ್ಷಿತ ಅಲ್ಲ. ಸಂವಿಧಾನವೇ ಕುಸಿದುಬಿದ್ದಿರುವ ಸ್ಥಿತಿಯಲ್ಲಿ ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಅಲ್ಲಿನ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ತಾಲಿಬಾನ್ ಮನಸ್ಥಿತಿಯ ಉತ್ತರ ಪ್ರದೇಶ ಸರ್ಕಾರವನ್ನು ರಾಷ್ಟ್ರಪತಿ ಕೂಡಲೇ ವಜಾಗೊಳಿಸಬೇಕು ಎಂದು ಕರ್ನಾಟಕ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಉತ್ತರ ಪ್ರದೇಶದ ಲಖೀಮ್ಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಕಾರು ಹರಿಸಿ ನಾಲ್ವರು ರೈತರನ್ನು ಕೊಂದ ಘಟನೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕರ್ನಾಟಕದ ಹಲವು ಕಡೆ ಕೂಡ ಪ್ರತಿಭಟನೆಗಳು ಭುಗಿಲೆದ್ದಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹ ಪತ್ರಿಕಾಗೋಷ್ಠಿ ನಡೆಸಿ ಘಟನೆಯನ್ನು ಖಂಡಿಸಿದ್ದಾರೆ. ಈ ನಡುವೆ ರೈತರ ಮೇಲೆ ಹಗೆ ಸಾಧಿಸುತ್ತಿರುವ ಉತ್ತರ ಪ್ರದೇಶ ಸರ್ಕಾರವನ್ನು ಕೂಡಲೇ ವಜಾ ಮಾಡಬೇಕೆಂದು ಕರ್ನಾಟಕದ ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ವಿರೋಧ ಪಕ್ಷಗಳು ರೈತರ ಜೊತೆ ನಿಲ್ಲುವುದನ್ನು ತಡೆಯಲು ಸಿಕ್ಕ ಸಿಕ್ಕವರನ್ನು ಬಂಧಿಸುತ್ತಿರುವ ಬಿಜೆಪಿಯ ತಾಲಿಬಾನ್ ಮನಸ್ಥಿತಿಯನ್ನು ಖಂಡಿಸುತ್ತೇನೆ. ಬಿಜೆಪಿಯವರಿಗೆ ಮಾನ, ಮರ‍್ಯಾದೆ ಯಾವುದು ಇಲ್ಲ. ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರನ್ನು ಬಂಧಿಸಿರುವುದು ಪ್ರಜಾಪ್ರಭುತ್ವಕ್ಕೆ ದೊಡ್ಡ ಕಳಂಕ. ನ್ಯಾಯ ಸಿಗುವವರೆಗೂ ಕಾಂಗ್ರೆಸ್ ಹೋರಾಟ ಮುಂದುವರಿಸುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಾರು ಹರಿಸಿ ನಾಲ್ವರು ರೈತರನ್ನು ಕೊಂದ ಘಟನೆ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಆರಂಭವಾಗಿದೆ. ಸಂಯುಕ್ತ ಹೋರಾಟ ಕರ್ನಾಟಕ ಮತ್ತು ರೈತ ಸಂಘಟನೆಗಳು, ಪ್ರಗತಿಪರ ಚಿಂತಕರು ಮತ್ತು ಎಡ ಸಂಘಟನೆಗಳು ಮೈಸೂರು ಬ್ಯಾಂಕ್ ವೃತ್ತದ ಬಳಿ ಸೇರಿ ಆಕ್ರೋಶ ಹೊರ ಹಾಕಿದ್ದಾರೆ. ವಿದ್ಯಾರ್ಥಿ ಯುವಜನ ಸಂಘಟನೆಗಳು ಸಹ ಸಾಥ್ ನೀಡಿವೆ.

0 Comments