"ಪ್ರಧಾನಿ ಮೋದಿ ಬಹು ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಹೇಳಿರುವುದನ್ನು ಸ್ವಾಗತಿಸುತ್ತೇನೆ, ಆದರೆ, ಸಂವಿಧಾನಾತ್ಮಕ ಪ್ರಕ್ರಿಯೆಯಲ್ಲಿ ಕಾಯಿದೆಗಳನ್ನು ಹಿಂಪಡೆಯುವ ತನಕ ಹೆದ್ದಾರಿ ತಡೆ ಚಳವಳಿ ರಾಜ್ಯದ್ಯಂತ ಮುಂದುವರೆಸುತ್ತೇವೆ." ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
"ದಿಲ್ಲಿ ರೈತ ಚಳವಳಿಯ ಇನ್ನಿತರ ಬಹು ಮುಖ್ಯ ಬೇಡಿಕೆಗಳಾದ ರೈತರ ಬೆಳೆಗೆ ಬೆಂಬಲ ಬೆಲೆಯನ್ನು ಶಾಸನಬದ್ಧಗೊಳಿಸುವುದೂ ಸೇರಿದಂತೆ ವಿದ್ಯುಚ್ಛಕ್ತಿ ಖಾಸಗೀಕರಣ ಮಾಡಬಾರದೆಂಬುದನ್ನೂ ಕೇಂದ್ರ ಸರ್ಕಾರ ಮಾನ್ಯ ಮಾಡಬೇಕು," ಎಂದು ಕೋಡಿಹಳ್ಳಿ ಅವರು ಆಗ್ರಹಿಸಿದ್ದಾರೆ.
ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, "ಕರ್ನಾಟಕ ರಾಜ್ಯದಲ್ಲಿ ಎಪಿಎಂಸಿ ಕಾಯಿದೆ, ಭೂ ಸುಧಾರಣಾ ಕಾಯಿದೆ ಹಾಗೂ ಜಾನುವಾರು ಹತ್ಯೆ ನಿಷೇಧ ಕಾಯಿದೆಗಳಿಗೆ ತಂದಿರುವ ತಿದ್ದುಪಡಿಯನ್ನು ಈ ಕೂಡಲೇ ಹಿಂಪಡೆಯಬೇಕು. ಇಲ್ಲವಾದಲ್ಲಿ ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ಸಂದರ್ಭದಲ್ಲಿ ರಾಜ್ಯದ ರೈತರು ಬೆಳಗಾವಿಯ ಸುವರ್ಣ ವಿಧಾನಸೌಧವನ್ನು ಮುತ್ತಿಗೆ ಹಾಕುತ್ತೇವೆ," ಎಂದು ಎಚ್ಚರಿಕೆ ನೀಡಿದ್ದಾರೆ.
"ರಾಜ್ಯದಲ್ಲಿ ಸುರಿದ ಧಾರಾಕಾರ ಮಳೆಯಿಂದ ರಾಜ್ಯದ ಬಹುತೇಕ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಾಶವಾಗಿವೆ. ಜನ ಜಾನುವಾರುಗಳು ಸಂಕಷ್ಟಕ್ಕೀಡಾಗಿವೆ. ಇದಕ್ಕೆ ಸಂಬAಧಿಸಿದAತೆ ನಷ್ಟ ಅನುಭವಿಸಿರುವ ಎಲ್ಲಾ ರೈತರ ಹೊಲ, ತೋಟ ಮತ್ತು ಗದ್ದೆಗಳಲ್ಲಿ ಬೆಳೆಯಾನುಸಾರ ಆಗಿರುವ ನಷ್ಟವನ್ನು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ಪರಿಹಾರ ಘೋಷಿಸಬೇಕೆಂದು," ಆಗ್ರಹಿಸಿದ್ದಾರೆ.

0 Comments