ಧರ್ಮಸ್ಥಳದ ಕನ್ಯಾಡಿಯಲ್ಲಿ ಪರಿಶಿಷ್ಟ ಜಾತಿಯ ವ್ಯಕ್ತಿ ದಿನೇಶ್ ಎಂಬುವರನ್ನು ಬಿಜೆಪಿ ಕಾರ್ಯಕರ್ತ ಕೃಷ್ಣ ಅಲಿಯಾಸ್ ಕಿಟ್ಟಿ ಎಂಬಾತ ಜಾಗದ ವಿವಾದದಲ್ಲಿ ಹಲ್ಲೆ ನಡೆಸಿ ಸಾವಿಗೆ ಕಾರಣವಾಗಿದ್ದು ಕೂಡಲೇ ಆರೋಪಿಯನ್ನು ಬಂಧಿಸಬೇಕೆಂದು ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.
ಆರೋಪಿ ಕೃಷ್ಣನ ಸಹೋದರ ಭಾಸ್ಕರ್ ಧರ್ಮಸ್ಥಳ ಎಂಬಾತ ಜಿಲ್ಲಾ ಭಜರಂಗದಳ ಸಂಚಾಲಕ ನಾಗಿದ್ದು, ಕೃಷ್ಣ ತಪ್ಪಿಸಿಕೊಳ್ಳಲು ನೆರವು ನೀಡಿದ್ದಾನೆ ಎನ್ನಲಾಗಿದೆ.
ಆದ್ದರಿಂದ ತಕ್ಷಣ ಇಬ್ಬರನ್ನೂ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಬಹುಜನ ಸಮಾಜ ಪಾರ್ಟಿಯು ರಾಜ್ಯಾದ್ಯಂತ ಬಿಜೆಪಿ ಸರ್ಕಾರ ಹಾಗೂ ಭಜರಂಗದಳದ ವಿರುದ್ಧ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶಾದ್ಯಂತ ಹಾಗೂ ಕರ್ನಾಟಕದಲ್ಲೂ ಸಹ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವರ್ಗಗಳ ಮೇಲೆ ನಿರಂತರವಾಗಿ ದಬ್ಬಾಳಿಕೆ, ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆಯಂತಹ ಘಟನೆಗಳು ನಡೆಯುತ್ತಿವೆ.
ಇಂತಹ ಸಮಾಜಘಾತಕ ಕೃತ್ಯಗಳನ್ನು ತಡೆಯಲು ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿದ್ದಾರೆ.
ಇಂತಹ ಕೃತ್ಯಗಳಲ್ಲಿ ಬಹುತೇಕ ಬಿಜೆಪಿ, ಬಜರಂಗದಳ, ಶ್ರೀರಾಮಸೇನೆ ಮುಂತಾದ ಸಂಘಪರಿವಾರದ ಸಂಘಟನೆಗಳ ಕಾರ್ಯಕರ್ತರು ಮತ್ತು ಮುಖಂಡರುಗಳು ಭಾಗಿಯಾಗಿರುವುದು ಹೆಚ್ಚಾಗಿ ಕಂಡುಬರುತ್ತಿದೆ.
ಆ ಕಾರಣಕ್ಕಾಗಿಯೇ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ಮತ್ತು ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಇದರಿಂದಾಗಿಯೇ ಕೊಲೆ, ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ. ಹಾಗೆಯೇ ಇಂತಹ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆಯಾಗುತ್ತಿದೆ. ಇದರಿಂದಾಗಿ ಆರೋಪಿಗಳಿಗೆ ಕುಮ್ಮಕ್ಕು ಸಿಗುತ್ತಿದೆ ಎಂದಿದ್ದಾರೆ.
ಧಾರ್ಮಿಕ ವಿಚಾರಗಳಲ್ಲಿ ಅನಗತ್ಯವಾಗಿ ಬೀದಿಗಿಳಿದು ಹೋರಾಡುವ ಬಿಜೆಪಿ ಮತ್ತು ಸಂಘ ಪರಿವಾರದ ಸಂಘಟನೆಗಳು ದಲಿತರ ಹತ್ಯೆ, ಅತ್ಯಾಚಾರ, ದೌರ್ಜನ್ಯದ ಪ್ರಕರಣಗಳಲ್ಲಿ ಜಾಣಮೌನ ವಹಿಸುವುದು ಖಂಡನೀಯ ಎಂದಿದ್ದಾರೆ.
ದಲಿತರ ಓಟಿಗಾಗಿ, ತಮ್ಮ ಸ್ವಾರ್ಥಕ್ಕಾಗಿ ಹಿಂದು ನಾವೆಲ್ಲ ಒಂದು ಎನ್ನುವ ಬಿಜೆಪಿ ಮತ್ತು ಸಂಘ ಪರಿವಾರ ತಮ್ಮದೇ ಕಾರ್ಯಕರ್ತರು ದಲಿತರ ಕೊಲೆ, ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದಾಗ ಮೌನವಾಗಿರುವುದು ಅವರ ಇಬ್ಬಂದಿತನಕ್ಕೆ ಸಾಕ್ಷಿಯಾಗಿದೆ.
ಅದರಲ್ಲೂ ಇಂತಹ ಘಟನೆಗಳು ನಡೆದಾಗ ಬಿಜೆಪಿಯಿಂದ ಆಯ್ಕೆಯಾಗಿರುವ ಶಾಸಕರು ಮತ್ತು ಸಂಸದರು, ಅದರಲ್ಲೂ ಮೀಸಲು ಕ್ಷೇತ್ರದ ಎಸ್ಸಿಎಸ್ಟಿ ಎಂಎಲ್ಎ, ಎಂಪಿಗಳು ಬಾಯಿ ಮುಚ್ಚಿಕೊಂಡಿರುವುದು ಅಕ್ಷರಶಹ ನಾಚಿಕೆಗೇಡು ಎಂದಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಗೃಹ ಇಲಾಖೆಯ ಮಂತ್ರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಸಂತ್ರಸ್ತ ಕುಟುಂಬದವರನ್ನು ಭೇಟಿ ಮಾಡಿ ಅವರಿಗೆ ಸಾಂತ್ವನ ಹೇಳಬೇಕು ಎಂದಿದ್ದಾರೆ.
ಬಜರಂಗದಳದ ಕಾರ್ಯಕರ್ತನೊಬ್ಬನ ಹತ್ಯೆಯಾದಾಗ ಇಡೀ ಸರ್ಕಾರವೇ ಅವರ ಮನೆ ಬಾಗಿಲಿಗೆ ಹೋಗಿ ನೆರವು ನೀಡಿದೆ. ಆರೋಪಿಗಳನ್ನು ತಕ್ಷಣ ಬಂಧಿಸಲಾಗಿದೆ.
ಇದೇ ರೀತಿ ದಲಿತ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ರಕ್ಷಣೆ ಹಾಗೂ ನೆರವು ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕೊಲೆ, ದೌರ್ಜನ್ಯ, ಅತ್ಯಾಚಾರದಂತಹ ಘಟನೆಗಳಲ್ಲೂ ಬಿಜೆಪಿ ಸರ್ಕಾರ ಮತ್ತು ಪಕ್ಷ ತಾರತಮ್ಯ ನೀತಿ ಅನುಸರಿಸುವುದು ಖಂಡನೀಯ.
ಈ ಪ್ರಕರಣದಲ್ಲಿ ಆರೋಪಿಗಳ ಬಂಧನ ವಿಳಂಬವಾದರೆ ಬಿಜೆಪಿ ಸರ್ಕಾರ ಮಾತ್ರವಲ್ಲ ಬಿಜೆಪಿ ಪಕ್ಷ ಮತ್ತು ಭಜರಂಗದಳದ ವಿರುದ್ಧ ನೇರವಾಗಿ ಬಿಎಸ್ಪಿ ಹೋರಾಟ ರೂಪಿಸುತ್ತದೆ ಎಚ್ಚರಿಕೆ ನೀಡಿದ್ದಾರೆ.
0 Comments