ಹೊಸಪೇಟೆ(ವಿಜಯನಗರ),ಮೇ25:ಮುಂಗಾರು ಹಂಗಾಮು ಆರಂಭವಾಗಿದ್ದು,ಬಿತ್ತನೆಗಾಗಿ ಕಳಪೆ ಬೀಜ ಮತ್ತು ಕಳಪೆ ರಸಗೊಬ್ಬರ ಮಾರಾಟ ಮಾಡುವ ಸಂಭವವಿದ್ದು,ಈ ಕುರಿತು ತೀವ್ರ ನಿಗಾವಹಿಸಬೇಕು ಮತ್ತು ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಯಲ್ಲಿ ತೊಂದರೆಯಾಗದಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಮುಂಗಾರು-ಹಂಗಾಮು ಸಿದ್ಧತೆಗೆ ಸಂಬಂಧಿಸಿದಂತೆ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಿತ್ತನೆ ಸಮಯದಲ್ಲಿ ಬೀಜ ಹಾಗೂ ರಸಗೊಬ್ಬರ ಪೂರೈಕೆದಾರರು,ಮಾರಾಟಗಾರರು ಕಳಪೆ ಬೀಜ ಮತ್ತು ರಸಗೊಬ್ಬರಗಳನ್ನು ವಿತರಿಸಿ ರೈತರಿಗೆ ಮೋಸ ಮಾಡುವ ಸಾಧ್ಯತೆ ಇದ್ದು,ಅಧಿಕಾರಿಗಳು ತಮ್ಮ ವಿಚಕ್ಷಣಾ ದಳದ ಮೂಲಕ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಬೇಕು. ಕಲಬೆರಕೆ ಮತ್ತು ಕಳಪೆ ಸಾಮಗ್ರಿಗಳನ್ನು ಪೂರೈಸಿದವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಬೆಳೆವಿಮೆಗೆ ಸಂಬಂಧಿಸಿದಂತೆ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಅಡಿ ಹೆಚ್ಚಿನ ನೋಂದಣಿ ಮಾಡಿಸುವುದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ ಡಿಸಿ ಅನಿರುದ್ಧ ಶ್ರವಣ್ ಅವರು
ಸಂರಕ್ಷಣಾ ಆ್ಯಪ್ ಬಗ್ಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು,ಬ್ಯಾಂಕ್ ಮ್ಯಾನೇಜರ್‍ಗಳು, ಪ್ರಗತಿಪರ ರೈತರು,ರೈತ ಮುಖಂಡರುಗಳಿಗೆ ತರಬೇತಿ ಕಾರ್ಯಾಗಾರ ಏರ್ಪಡಿಸುವುದರ ಮೂಲಕ ಹೆಚ್ಚಿನ ಅರಿವು ಮೂಡಿಸಿ ಎಂದರು.
ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಕುರಿತು ಆಕಾಶವಾಣಿಯಲ್ಲಿ ಫೋನ್-ಇನ್ ಕಾರ್ಯಕ್ರಮದ ಮೂಲಕ ರೈತರಿಗೆ ಅರಿವು ಮೂಡಿಸುವ ಕೆಲಸ ಮಾಡುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಅವರಿಗೆ ಸೂಚಿಸಿದರು.
ವಿಜಯನಗರ ಜಿಲ್ಲೆಯಲ್ಲಿ ಮುಂಗಾರುಹಂಗಾಮಿನಲ್ಲಿ 2,80,508 ಹೆಕ್ಟೇರ್ ಬಿತ್ತನೆ ಗುರಿ ಇದೆ. ಈಗಾಗಲೇ ಬಿತ್ತನೆ ಬೀಜಗಳನ್ನು 18 ರೈತ ಸಂಪರ್ಕ ಕೇಂದ್ರಗಳು ಹಾಗೂ 12 ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುತ್ತಿದೆ ಎಂದರು.
ಕೃಷಿ ಪರಿಕರ ಮಾರಾಟಗಾರರಿಗೆ ಕಾಯ್ದೆಗಳ ಕುರಿತು ತಾಲೂಕುವಾರು ತರಬೇತಿಗಳನ್ನು ಆಯೋಜಿಸಲಾಗಿದೆ.ಜಿಲ್ಲಾಮಟ್ಟದಲ್ಲಿ ರಸಗೊಬ್ಬರ ತಯಾರಿಕಾ ಸಂಸ್ಥೆಗಳ ಪ್ರತಿನಿಧಿಗಳ ಸಭೆ ಜರುಗಿಸಲಾಗಿದೆ.ಖಾಸಗಿ ಕೃಷಿ ಪರಿಕರ ಮಾರಾಟ ಮಳಿಗೆಗಳನ್ನು ತಪಾಸಣೆ ಮಾಡಿ,ಗುಣಮಟ್ಟದ ಕೃಷಿ ಪರಿಕರಗಳ ವಿತರಣೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ 19773 ಕ್ವಿಂಟಾಲ್ ಬಿತ್ತನೆ ಬೀಜ ಅಗತ್ಯವಿದ್ದು, 7284 ಕ್ವಿಂಟಾಲ್ ದಾಸ್ತಾನು ಇದೆ. ಹಂತಹಂತವಾಗಿ ಉಳಿದ ಬೀಜಗಳನ್ನು ತರಿಸಿ ವಿತರಣೆಗೆ ಕ್ರಮವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ 124921 ಮೆಟ್ರಿಕ್ ಟನ್ ರಸಗೊಬ್ಬರ ಅಗತ್ಯವಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಅಗತ್ಯವಿರುವಷ್ಟು ರಸಗೊಬ್ಬರ ಪೂರೈಕೆ ಮಾಡಲಾಗಿದೆ ಎಂದರು.
ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ನ್ಯಾನೋ ಯೂರಿಯಾ ಉಪಯೋಗ, ಸಂಪೂರ್ಣ ಗೊಬ್ಬರವೇ..ರೈತ ಸಂಪರ್ಕ ಕೇಂದ್ರಗಳ ಮೂಲಕ ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ,ಬೆಳೆವಿಮೆ,ಕೀಟನಾಶಕಗಳ ಕುರಿತ ಭಿತ್ತಿಪತ್ರಗಳನ್ನು ಹಾಗೂ ಪೋಸ್ಟರ್‍ಗಳನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪನಿರ್ದೇಶಕ ಮಂಜುನಾಥ,ಕೃಷಿ,ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳು, ಕೃಷಿ ಪರಿಕರ ಮಾರಾಟಗಾರ ಸಂಘದ ಅಧ್ಯಕ್ಷರು,ಬೆಳೆವಿಮಾ ಕಂಪನಿಗಳ ಪ್ರತಿನಿಧಿಗಳು ಸೇರಿದಂತೆ ಇನ್ನೀತರರು ಇದ್ದರು.

0 Comments