ವರದಿ : ಚಿಕ್ಕತೇಕಹಳ್ಳಿ ಡಿ ಶಿವಕುಮಾರ್
ಶಿಡ್ಲಘಟ್ಟ*: ಈ ವಿಧಾನಸಭಾ ಕ್ಷೇತ್ರದಲ್ಲಿ 2023 ಕ್ಕೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ. ಈಗಾಗಲೇ ನೀವು ಕಾಂಗ್ರೇಸ್ ಮತ್ತು ಜೆಡಿಎಸ್ ಆಡಳಿತ ನೋಡಿದ್ದೀರಿ.ಒಮ್ಮೆ ಬಿಜೆಪಿಗೆ ಆಡಳಿತ ಕೊಟ್ಟು ನೋಡಿ ಎಂದರು. ಮುಖಂಡರು ಮತ್ತು ಕಾರ್ಯಕರ್ತರೆಲ್ಲರೂ ಒಗ್ಗಟ್ಟಿನಿಂದ ಗುರಿಯೆಡೆಗೆ ನಡೆಯುವ ಮೂಲಕ ಕ್ಷೇತ್ರದಲ್ಲಿ ಕಮಲ ಅರಳಿಸಲು ಶ್ರಮಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಕರೆ ನೀಡಿದರು.
ಇದೇ ಸೆಪ್ಟಂಬರ್ 8ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ಜನೋತ್ಸವ ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ನಗರದ ಹೊರವಲಯದ ಹಂಡಿಗನಾಳ ಗ್ರಾಮದ ಕೆಂಪಣ್ಣ ವೀರಣ್ಣ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಜನೋತ್ಸವ ಕಾರ್ಯಕ್ರಮ ಗಟ್ಟಿ ಅಡಿಪಾಯ ಆಗಬೇಕು ಎಂದು ಅವರು ಸಲಹೆ ನೀಡಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿಬೇಕು. ಸರ್ಕಾರದ ರಿಪೋರ್ಟ್ ಕಾರ್ಡ್ ಜನರ ಮುಂದಿಡಬೇಕು. ಉಜ್ವಲ ಯೋಜನೆ, ಪ್ರಧಾನಮಂತ್ರಿ ಆವಾಜ್ ಯೋಜನೆ, ಸ್ವಚ್ಛ ಭಾರತ್ ಮಿಷನ್ ಅನೇಕ ಯೋಜನೆಗಳನ್ನು ಕೇಂದ್ರ ಹಾಗು ರಾಜ್ಯ ಸರ್ಕಾರ ಬಡವರಿಗಾಗಿ ಜಾರಿಗೆ ತಂದಿದೆ, ಅಂತಹ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಿ ಮನವರಿಕೆ ಮಾಡಿ.ಮುಂದಿನ ಚುನಾವಣೆಯ ಭವಿಷ್ಯವನ್ನು ತೀರ್ಮಾನಿಸುವವರು ಜನಸಾಮಾನ್ಯರೇ ಎಂದು ಜನೋತ್ಸವ ಕುರಿತು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ ರಾಜಣ್ಣ,ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ,ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ ಸಿ ನಂದೀಶ್, ಗ್ರಾಮಾಂತರ ಮಂಡಲಾಧ್ಯಕ್ಷ ಸುರೇಂದ್ರ ಗೌಡ, ಜಿಲ್ಲಾ ಕಾರ್ಯದರ್ಶಿ ದೇವರಾಜ್, ಆಂಜನೇಯಗೌಡ,ನರ್ಮದಾರೆಡ್ಡಿ ಹಾಗೂ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.

0 Comments