ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣಾ ಕೋಟ್ಪಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಧಿಕಾರಿಗಳು ಸಮನ್ವಯವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ, ಕಾಲೇಜು, ಶಿಕ್ಷಣ ಸಂಸ್ಥೆಗಳ 100 ಗಜ ವ್ಯಾಪ್ತಿಯಲ್ಲಿ ತಂಬಾಕು ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣಾ ಕೋಶದ ವತಿಯಿಂದ ಜಿಲ್ಲೆಯಲ್ಲಿ 497 ಶಿಕ್ಷಣ ಸಂಸ್ಥೆಗಳ ಬಳಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿರುವುದನ್ನು ಗುರುತಿಸಿದ್ದು, ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ದಾಳಿ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
*ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ*: ಪ್ರೌಢಶಾಲೆ ಹಾಗೂ ಕಾಲೇಜು ಹಂತದಲ್ಲಿ ತಂಬಾಕು ಸೇವನೆ ದುಶ್ಚಟಗಳಿಗೆ ಮಕ್ಕಳು ಹೆಚ್ಚಾಗಿ ಒಳಗಾಗುತ್ತಾರೆ. ಇದರ ಸೇವನೆಯಿಂದ ಉಂಟಾಗುವ ಕ್ಯಾನ್ಸರ್ ಮುಂತಾದ ಖಾಯಿಲೆಗಳ ಬಗ್ಗೆ ಮಕ್ಕಳಿಗೆ ಕಿರುಚಿತ್ರಗಳ ಮೂಲಕ ತಿಳಿಸಿ ಇದರಿಂದ ಮಕ್ಕಳ ಮನಸ್ಸಿನ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದರು.
ಶಿಕ್ಷಣ ಸಂಸ್ಥೆಗಳಲ್ಲಿ ಆಟದ ಮೈದಾನದಲ್ಲಿ ಶಾಲಾ ಕಾಲೇಜು ಕಾರ್ಯನಿರ್ವಹಣೆಯ ಅವಧಿಯ ನಂತರ ಅನಾಧಿಕೃತ ವ್ಯಕ್ತಿಗಳು ಪ್ರವೇಶಿಸಿ ಮದ್ಯಪಾನ, ತಂಬಾಕು ವಸ್ತು ಸೇವನೆ ಮಾಡಬಹುದು. ಈ ಬಗ್ಗೆ ಶಾಲಾ ಮುಖ್ಯಸ್ಥರು ಹೆಚ್ಚಿನ ನಿಗಾ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘನೆಯ ಬಗ್ಗೆ 58 ದಾಳಿ ನಡೆಸಿ 143480 ರೂ ದಂಡ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ: ಧನಂಜಯ್ ಸಭೆಗೆ ಮಾಹಿತಿ ನೀಡಿದರು. ಜಿಲ್ಲಾಧಿಕಾರಿಗಳು ಇನ್ನೂ ಹೆಚ್ಚಿನ ದಾಳಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸರಸ್ವತಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ: ಎಂ.ಡಿ ಸಂಜಯ್, ಆರ್.ಸಿ.ಹೆಚ್ ಅಧಿಕಾರಿ ಡಾ: ಅನಿಲ್ ಕುಮಾರ್, ಡಿ.ಎಲ್ಒ ಡಾ: ಅಶ್ವಥ್, ಡಿ.ಎಂ.ಒ ಡಾ: ಭವಾನಿ ಶಂಕರ್, ಎಫ್. ಡ್ಬ್ಯೂ ಒ ಡಾ: ಶಶಿಧರ್, ಜಿಲ್ಲಾ ಸಲಹೆಗಾರ ತಿಮ್ಮರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

0 Comments